Tuesday, 8 June 2021

ಭಾರಿ ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ ..!


 ಬೆಂಗಳೂರು : ಕರಾವಳಿ ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಜೂನ್ 8 ರಿಂದ 9 ರವರೆಗೆ ಬಹುತೇಕ ಎಲ್ಲಾ ಪ್ರದೇಶಗಳಲ್ಲಿ ಮಳೆಯಾಗಲಿದೆ. ಜೂನ್ 10 ಹಾಗೂ 11 ರಂದು ಗುಡುಗುಸಹಿತ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇಂದಿನಿಂದ ರಾಜ್ಯಾದ್ಯಂತ ಉತ್ತಮ ಮಳೆಯಾಗುವ ಸಾಧ್ಯತೆಯಿದ್ದು, ಹಲವು ಕಡೆ ಮೋಡ ಕವಿದ ವಾತಾವರಣವಿರಲಿದೆ.

ಜೂನ್ 3ರಂದು ಕೇರಳ ಪ್ರವೇಶಿಸಿದ್ದ ಮುಂಗಾರು ಜೂನ್ 5ರಂದು ಕರ್ನಾಟಕ ಪ್ರವೇಶಿಸಿದ್ದು, ರಾಜ್ಯದ ಕರಾವಳಿ ಹಾಗೂ ಉತ್ತರ ಒಳನಾಡಿಗೆ ಆಗಮಿಸಿದೆ. ಹೀಗಾಗಿ ಜೂನ್ 9ರವರೆಗೂ ಅನೇಕ ಜಿಲ್ಲೆಗಳಿಗೆ ಹೆಚ್ಚಿನ ಮಳೆಯಾಗುವ ಸೂಚನೆ ನೀಡಲಾಗಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಮುಂಗಾರು ಮಳೆ ಆರಂಭವಾಗಿದ್ದು, ಮಳೆಯ ಆರ್ಭಟ ಹೆಚ್ಚಾಗಲಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಅಧಿಕ ಮಟ್ಟದಲ್ಲಿ ಮಳೆಯಾಗಲಿದೆ ಎಂದು ತಿಳಿಸಿದೆ.

ಉತ್ತರ ಒಳನಾಡಿನಲ್ಲಿ ಕೆಲವೆಡೆ ಹಾಗೂ ದಕ್ಷಿಣ ಒಳನಾಡಿನಲ್ಲಿ ಕೆಲವು ಸ್ಥಳಗಳಲ್ಲಿ ಮಾತ್ರ ಮಳೆಯಾಗಿದೆ.ರಾಯಚೂರು ಜಿಲ್ಲೆಯಲ್ಲಿ 2 ಸೆಂ.ಮೀ ಮಳೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ 1 ಸೆಂ.ಮೀ, ಭದ್ರಾವತಿ ಮತ್ತು ತಿಪಟೂರಿನಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ಉತ್ತರ ಒಳನಾಡಿನಲ್ಲಿ ಜೂನ್ 7 ರಿಂದ 11 ರವರೆಗೆ ಕೆಲವೆಡೆ ಮಾತ್ರ ಸಾಧಾರಣ ಮಳೆ ಇರಲಿದ್ದು, ದಕ್ಷಿಣ ಒಳನಾಡಿನಲ್ಲಿ ಜೂನ್ 7 ರಿಂದ 11 ರ ವರೆಗೆ ಕೆಲವು ಪ್ರದೇಶಗಳಲ್ಲಿ ಹಗುರ ಮಳೆಯಾಗುವ ಮುನ್ಸೂಚನೆ ಇದೆ. ರಾಜ್ಯದಲ್ಲಿ ಮಾನ್ಸೂನ್ ಚುರುಕಾಗಿದೆ.

ರಾಜ್ಯದಲ್ಲಿ ಮುಂದಿನ ಎರಡು ದಿನಗಳ ಕಾಲ ಗರಿಷ್ಠ ಉಷ್ಣಾಂಶ 32 ಡಿಗ್ರಿ ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಬುಧವಾರದವರೆಗೂ ಕರಾವಳಿ ಹಾಗೂ ಉತ್ತರ, ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆ/ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ತಿಳಿಸಿದೆ.

# ಕೆಲವು ಜಿಲ್ಲೆಗಳಲ್ಲಿ ಹಳದಿ ಅಲರ್ಟ್ :
ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆ ಹಾಗೂ ಇನ್ನು ಕೆಲವೆಡೆ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇರುವುದಾಗಿ ಇಲಾಖೆ ತಿಳಿಸಿದೆ. ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗಳಲ್ಲಿ ಅತ್ಯಧಿಕ ಮಳೆಯಾಗಲಿದೆ ಎನ್ನಲಾಗಿದೆ. ಬೀದರ್, ಗದಗ , ಬೆಂಗಳೂರು ನಗರ, ಕಲಬುರ್ಗಿ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಕೋಲಾರ, ತುಮಕೂರು, ಕೊಪ್ಪಳ, ದಾವಣಗೆರೆ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.

ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿತ್ತು. ಈ ಬಾರಿ ಉತ್ತರ ಕರ್ನಾಟಕದಲ್ಲಿ ಮಳೆ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಮಲೆನಾಡು ಹಾಗೂ ಕರಾವಳಿಯಲ್ಲಿ ಭೂಕುಸಿತದ ಸಂಭವವಿರುವ ಕಾರಣ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ.
ರಾಯಚೂರು, ಕೊಡಗು, ಬೆಳಗಾವಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಎಸ್‌ಡಿಆರ್‌ಎಫ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

No comments:

Post a Comment